ನವದೆಹಲಿ : ವಲಸೆ ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಮಂಗಳವಾರದವರೆಗೆ ಕಾಯ್ದಿರಿಸಿದ್ದು, ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 15 ದಿನಗಳ ಕಾಲವಕಾಶವನ್ನು ನೀಡಿದೆ.
ವಲಸೆ ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಪಟ್ಟ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ - ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಮಾಡಲು ಸರ್ಕಾರಗಳಿಗೆ ಕಾಲವಕಾಶ
ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆ ವಲಸೆ ಕಾರ್ಮಿಕರಿಗೆ ಉಂಟಾಗಿರುವ ಸಮಸ್ಯೆಗಳ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿದೆ.

ವಲಸೆ ಕಾರ್ಮಿಕರು ಊರಿಗೆ ತೆರಳಲು ಜೂನ್ 3 ರವರೆಗೆ ಸುಮಾರು 4,200 ಶ್ರಮಿಕ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಇದುವರೆಗೆ ಒಂದು ಕೋಟಿಯಷ್ಟು ವಲಸೆ ಕಾರ್ಮಿಕರು ಈ ರೈಲುಗಳ ಮೂಲಕ ಮನೆ ತಲುಪಿದ್ದಾರೆ. ಹೆಚ್ಚಿನ ರೈಲುಗಳನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಬಿಡಲಾಗಿದೆ ಎಂದು ವಿಚಾರಣ ವೇಳೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ ಕೌಲ್ ಮತ್ತು ಎಂ.ಆರ್ ಶಾ ಅವರ ಮುಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಾಹಿತಿ ನೀಡಿದರು.
ಸ್ವಯಂ ಪ್ರೇರಿತವಾಗಿ ಕೆಲವೊಂದು ನಿರ್ದೇಶನಗಳನ್ನು ನೀಡಿದ ಬಳಿಕ ವಲಸೆ ಕಾರ್ಮಿಕರಿಗೆ ಸಂಬಂಧಪಟ್ಟ ವಿಷಯವನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ತೆಗೆದುಕೊಂಡಿತ್ತು, ಇದಕ್ಕಿಂತ ಮೊದಲು ಮೇ. 28 ರಂದು ಆದೇಶ ಹೊರಡಿಸಿದ ಕೋರ್ಟ್, ಊರಿಗೆ ತೆರಳಲು ಇಚ್ಚಿಸುವ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಮತ್ತು ಉಚಿತ ಸಾರಿಗೆ ವ್ಯವಸ್ಥೆ ಮಾಡಿಕೊಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.