ನವದೆಹಲಿ: ಮುಸ್ಲಿಂ ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶವಿಲ್ಲ ಎಂಬ ನಿರ್ಬಂಧಗಳು ‘ಅಸಾಂವಿಧಾನಿಕ’. ಸಮಾನತೆ ಮತ್ತು ಲಿಂಗ ನ್ಯಾಯದ ಹಕ್ಕನ್ನು ಉಲ್ಲಂಘಿಸಿವೆ ಎಂದು ಆರೋಪಿಸಿ ದೇಶಾದ್ಯಂತ ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಮನವಿಗೆ ಸ್ಪಂದಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠವು ಅರ್ಜಿಯನ್ನು ಆಲಿಸಲು ಒಪ್ಪಿಗೆ ನೀಡಿತು.
ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೂ ಒಳಗೊಂಡ ನ್ಯಾಯಪೀಠವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಇತರರಿಗೆ ಮನವಿಯ ಕುರಿತಾಗಿ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.
ಪುಣೆ ಮೂಲದ ಮುಸ್ಲಿಂ ಮಹಿಳೆಯರು ಸಲ್ಲಿಸಿರುವ ಮನವಿಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲೇಖಿಸಲಾಗಿದೆ. ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ಯಾವುದೇ ನಾಗರಿಕರ ವಿರುದ್ಧ ಯಾವುದೇ ತಾರತಮ್ಯ ಮಾಡಬಾರದು ಎಂದು ಹೇಳಿದ್ದಾರೆ.