ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೋಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೂ ಒಳಪಡಿಸಬಹುದು ಎಂದು ಹೇಳಲಾಗುತ್ತಿದೆ. ವೈದ್ಯಕೀಯ ಮೂಲಗಳ ಪ್ರಕಾರ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಮನೆಯಲ್ಲಿರುವ ಜಿಮ್ನಲ್ಲಿದ್ದಾಗ ಗಂಗೂಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಗಂಗೂಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ, ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಟ್ವೀಟ್ ಮಾಡಿದ್ದು, ಸೌರವ್ ಗಂಗೂಲಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ತಾವು ಅವರ ಕುಟುಂಬದೊಂದಿಗೆ ಮಾತನಾಡಿದ್ದು, ದಾದಾ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.