ಹೈದರಾಬಾದ್:ರಾಜಧಾನಿ ಹೈದರಾಬಾದ್ ಸೇರಿದಂತೆತೆಲಂಗಾಣದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಇದುವರೆಗೆ ಕಾಣದ ರೀತಿಯಲ್ಲಿ ಭಾರಿ ಮಳೆಯಾಗುತ್ತಿದೆ. ರಾಜಧಾನಿ ಹೈದರಾಬಾದ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರವಾಹ ಪರಿಸ್ಥಿತಿಯನ್ನು ಸಿಎಂ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಅಗತ್ಯ ಸಂದರ್ಭದಲ್ಲಿ ರಕ್ಷಣಾ ಕಾರ್ಯ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.
ಮುಂದಿನ ಮೂರು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆ ಬಗ್ಗೆ ಮಾಹಿತಿ ಇದ್ದು, ಮಳೆ ಹೆಚ್ಚಿರುವ ಪ್ರದೇಶದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ. ಅಗತ್ಯ ಸ್ಥಳಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆದು, ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಎಲ್ಲಾ ಗ್ರಾಮ ಹಾಗೂ ನಗರ ಪ್ರದೇಶಗಳಿಂದ ಪ್ರವಾಹ ಪರಿಸ್ಥಿತಿಯ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ರಕ್ಷಣಾ ಕಾರ್ಯ ಹಾಗೂ ಪರಿಹಾರ ಕ್ರಮ ಕೈಗೊಳ್ಳಲು ಯಾವುದೇ ಹಣಕಾಸಿನ ಕೊರತೆಯಿಲ್ಲ. ಪರಿಸ್ಥಿತಿ ನಿಭಾಯಿಸಲು ರಾಜ್ಯದ ಬೊಕ್ಕಸ ಸಮರ್ಥವಾಗಿದೆ ಎಂದು ಕೆಸಿಆರ್ ಸಮರ್ಥಿಸಿಕೊಂಡಿದ್ದಾರೆ.
ವಾರಂಗಲ್ ನಗರ, ವಾರಂಗಲ್ ಗ್ರಾಮಾಂತರ, ಕರೀಂನಗರ, ಆಸಿಫಾಬಾದ್, ಮ್ಯಾಂಚೆರಿಯಲ್, ನಿರ್ಮಲ್, ಪೆದ್ದಪಲ್ಲಿ, ಭೋಪಲ್ ಪಲ್ಲಿ, ಮುಲುಗು, ಭದ್ರಾದ್ರಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಜಿಲ್ಲೆಗಳಿಗೆ ಸಿಎಂ ಹೆಚ್ಚು ಮಹತ್ವ ಕೊಟ್ಟಿದ್ದಾರೆ.