ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಸೈನಿಕರು ಶನಿವಾರ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರ ತಿಳಿಸಿದ್ದಾರೆ.
ದುರದೃಷ್ಟವಶಾತ್, ಇಬ್ಬರು ಭಾರತೀಯ ಸೈನಿಕರು ತೀವ್ರ ಗಾಯಗಳಿಂದ ಬಲಿಯಾಗಿದ್ದಾರೆ. ಸೇನೆಯು ಅವರ ಸರ್ವೋಚ್ಚ ತ್ಯಾಗಕ್ಕೆ ನಮಸ್ಕರಿಸುತ್ತದೆ ಎಂದು ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾದ ರಾಂಪುರ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನವು ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ನಾಲ್ಕು ವರ್ಷದ ಬಾಲಕ ಸೇರಿದಂತೆ ಮೂವರು ಸೈನಿಕರು ಮತ್ತು ಮೂವರು ನಾಗರಿಕರು ಶುಕ್ರವಾರ ಗಾಯಗೊಂಡಿದ್ದರು.
ಇನ್ನೊಂದೆಡೆ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ದೇಶದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ದಂಗೇರಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ತಿಳಿದ ನಂತರ, ಶನಿವಾರ ಮುಂಜಾನೆ ಭದ್ರತಾ ಪಡೆಗಳು ಈ ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.