ಗಾಂಧಿನಗರ (ಗುಜರಾತ್):ಮುಂದಿನ ಗುಜರಾತ್ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿದ್ದ ಶಾಸಕ ಭೂಪೇಂದ್ರ ಪಟೇಲ್ ಅವರನ್ನು ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಗಾಂಧಿನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ವರಿಷ್ಠರು ಭೂಪೇಂದ್ರ ಪಟೇಲ್ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಪಕ್ಷದ ಶಾಸಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ಸಭೆಯಲ್ಲಿ ನಿರ್ಗಮಿತ ಸಿಎಂ ವಿಜಯ್ ರೂಪಾನಿ ಕೂಡ ಭಾಗವಹಿಸಿದ್ದರು.