ಪಾಟ್ನಾ (ಬಿಹಾರ): ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ವಿಧಾನಸೌಧದ ಒಳಗೆ ಹಾಗೂ ಹೊರಗಡೆ ಎರಡೂ ಕಡೆಗಳಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸುತ್ತಿದ್ದಾರೆ. ಇದರ ನಡುವೆ ಪ್ರತಿಭಟನಾ ಮೆರವಣಿಗೆ ವೇಳೆ ಪೊಲೀಸರು ನಡೆಸಿದ ಲಾಠಿ ಪ್ರಹಾರದಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.
ಬಿಹಾರ ವಿಧಾನಸಭೆಯ ಅಧಿವೇಶನದ ನಡೆಯುತ್ತಿದೆ. ನಾಲ್ಕನೇ ದಿನವಾದ ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರ ಸಚಿವರಾದ ನಿತ್ಯಾನಂದ ರೈ, ಅಶ್ವಿನಿ ಕುಮಾರ್ ಚೌಬೆ, ರಾಜೀವ್ ಪ್ರತಾಪ್ ರೂಡಿ, ಸುಶೀಲ್ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ ಮುಂತಾದ ನಾಯಕರು ಐತಿಹಾಸಿಕ ಗಾಂಧಿ ಮೈದಾನದಿಂದ ಬಿಹಾರ ವಿಧಾನಸೌಧದವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೊಂಡೆದೆ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ನೇತೃತ್ವದಲ್ಲಿ ಸದನದ ಬಿಜೆಪಿ ಸದಸ್ಯರು ಒಳಗೆ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ನಡೆದ ಶಿಕ್ಷಕರ ನೇಮಕಾತಿ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧದ ಆರೋಪಗಳು ಹಾಗೂ 10 ಲಕ್ಷ ಉದ್ಯೋಗ ಸೃಷ್ಟಿ ಬಗ್ಗೆ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿ ಕೇಸರಿ ಪಕ್ಷದ ನಾಯಕರು ಹೋರಾಟ ಕೈಗೊಂಡಿದ್ದಾರೆ.