ಮೋತಿಹಾರಿ (ಬಿಹಾರ) ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಷಪೂರಿತ ಕಳ್ಳಭಟ್ಟಿ ಸೇವನೆಯಿಂದ ಸಾವಿಗೀಡಾದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರ ಈಗಾಗಲೇ 27 ಜನರು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡು ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಐವರು ರೋಗಿಗಳು ಸಾವಿಗೀಡಾಗಿದ್ದಾರೆ. ಹಲವು ರೋಗಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಪಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್‌ಪುರದ ವೀರೇಂದ್ರ ಸಾಹ್, ಹರ್ಸಿದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾನೇಜ್ ಮಹತೋ ಮತ್ತು ಬ್ರಿಜೇಶ್ ಯಾದವ್ ಮೃತಪಟ್ಟವರು ಎಂದು ವರದಿಯಾಗಿದೆ. ಪ್ರಸ್ತುತ 11 ಮಂದಿ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲೆಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಿಂದ ಆಂಬುಲೆನ್ಸ್ ಮೂಲಕ ಮದ್ಯ ಸೇವನೆಯಿಂದ ಅಸ್ವಸ್ಥರಾಗಿರುವ ರೋಗಿಗಳನ್ನು ಕರೆತರುವ ಪ್ರಕ್ರಿಯೆ ನಡೆಯುತ್ತಿದೆ.
ಪೊಲೀಸರು ಒಂಬತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಇದುವರೆಗೆ ಐದು ಪ್ರಕರಣಗಳನ್ನು ದಾಖಲಿಸಿ 174 ಜನರನ್ನು ಬಂಧಿಸಿದ್ದಾರೆ ಎಂದು ಸೋಮವಾರ ತಡರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.