ಪಾಟ್ನಾ(ಬಿಹಾರ):ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಜೊತೆಗಿನ ಮೈತ್ರಿ ಮುರಿದುಕೊಂಡು ಆರ್ಜೆಡಿ, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ನಿತೀಶ್ ಕುಮಾರ್ ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿದ್ದಾರೆ. ನಿನ್ನೆ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 31 ಶಾಸಕರು ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಶೇ. 72ರಷ್ಟು ಸಚಿವರ ಮೇಲೆ ಕ್ರಿಮಿನಲ್ ಕೇಸ್ ಇರುವುದು ಬಹಿರಂಗಗೊಂಡಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನಡೆಸಿದ ಸಮೀಕ್ಷೆಯಿಂದ ಈ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಮುಖ್ಯವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಹ ಪ್ರಕರಣ ದಾಖಲಾಗಿರುವುದಾಗಿ ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್ ತಿಳಿಸಿದೆ. ಅಚ್ಚರಿ ಅಂದ್ರೆ, ಹಾಲಿ ಕಾನೂನು ಸಚಿವರ ಮೇಲೂ ಕಿಡ್ನಾಪ್ ಕೇಸ್ ಇದೆ.