ಕರ್ನಾಟಕ

karnataka

ETV Bharat / bharat

ಬೆಳಗಾವಿ ಪ್ರಕರಣ ಖಂಡಿಸಿ 5 ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

BJP constitutes fact finding committee on Belagavi woman assault case: ಬಿಜೆಪಿ ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್​, ಲಾಕೆಟ್​ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನು ಸತ್ಯಶೋಧನಾ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

Protest by BJP Members in front of Parliament
ಸಂಸತ್​ ಮುಂದೆ ಬಿಜೆಪಿ ಸದಸ್ಯರಿಂದ ಪ್ರತಿಭಟನೆ

By ETV Bharat Karnataka Team

Published : Dec 15, 2023, 3:53 PM IST

Updated : Dec 15, 2023, 4:54 PM IST

ಸಂಸತ್​ ಮುಂದೆ ಬಿಜೆಪಿ ಸದಸ್ಯರಿಂದ ಪ್ರತಿಭಟನೆ

ನವದೆಹಲಿ: ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಇಂದು 5 ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ.

ಮಹಿಳೆಯನ್ನು ಅಮಾನುಷವಾಗಿ ನಡೆಸಿಕೊಂಡ ಘಟನೆಯನ್ನು ಖಂಡಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಮಿತಿ ರಚಿಸಿದ್ದಾರೆ. ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸತ್ಯಶೋಧನೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ. ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್​, ಲಾಕೆಟ್​ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಸಮಿತಿಯ ಸದಸ್ಯರಾಗಿದ್ದಾರೆ.

ಘಟನೆಯ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಡ್ಡಾ, "ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ. ವಿಶೇಷವಾಗಿ ಮಹಿಳೆಯರ ವಿರುದ್ಧ ಇಂತಹ ಘಟನೆಗಳು ವರದಿಯಾಗುತ್ತಿವೆ. ಅಪರಾಧಗಳನ್ನು ನಿಭಾಯಿಸುವಲ್ಲಿ ದೇಶದೆಲ್ಲೆಡೆ ಕಾಂಗ್ರೆಸ್​ ಸೋತಿದೆ. ಕಾಂಗ್ರೆಸ್​ ಸರ್ಕಾರಗಳ ಬೇಜವಾಬ್ದಾರಿ ವರ್ತನೆಯನ್ನು ಇದು ಬಹಿರಂಗಪಡಿಸುತ್ತದೆ" ಎಂದು ಟೀಕಿಸಿದ್ದಾರೆ.

ಸಂಸತ್​ ಮುಂದೆ ಪ್ರತಿಭಟನೆ: ಈ ಘಟನೆಯನ್ನು ಖಂಡಿಸಿ ಕರ್ನಾಟಕದ ಬಿಜೆಪಿ ಸಂಸದರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸದಾನಂದ ಗೌಡ ಮಾತನಾಡಿ, "ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ವಿನಾಕಾರಣ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ, ವಿದ್ಯುತ್​ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಾಜ್ಯದ ಎಸ್​ಸಿ, ಎಸ್​ಟಿ ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ಕರ್ನಾಟಕದ ಕಾಂಗ್ರೆಸ್​ ಸರ್ಕಾರ ವಿಫಲವಾಗಿದೆ" ಎಂದು ವಾಗ್ದಾಳಿ ನಡೆಸಿದರು.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, "ಎಸ್​ಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹೆಚ್ಚುತ್ತಿರುವ ಇಂಥ ಅಪರಾಧ ಪ್ರಕರಣಗಳು, ಕಾನೂನು ಹಾಗೂ ಸುವ್ಯವಸ್ಥೆ ಹದಗೆಡುತ್ತಿರುವುದು ಮಾತ್ರವಲ್ಲದೆ ಅವುಗಳನ್ನು ತಡೆಗಟ್ಟಲು ಕಾಂಗ್ರೆಸ್​ ಎಡವುತ್ತಿರುವುದನ್ನು ತೋರಿಸುತ್ತದೆ. ಅಸಹಾಯಕ ಕಾಂಗ್ರೆಸ್​ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ನಮ್ಮ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದಾರೆ. ಈ ತಂಡ ಆದಷ್ಟು ಶೀಘ್ರದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ವರದಿ ಸಲ್ಲಿಸಲಿದೆ" ಎಂದು ಹೇಳಿದ್ದಾರೆ.

ಏನಿದು ಘಟನೆ?: ಯುವಕನೋರ್ವ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿ ಊರಿನಿಂದ ಓಡಿಹೋದ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ನಂತರ ವಿದ್ಯುತ್​ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಡಿಸೆಂಬರ್​ 11ರಂದು ನಡೆದಿತ್ತು. ಈ ಸಂಬಂಧ ಈಗಾಗಲೇ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಕರ್ನಾಟಕ ಹೈಕೋರ್ಟ್​ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಮಗನ 'ಪ್ರೀತಿ', ತಾಯಿಗೆ ಶಿಕ್ಷೆ; ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ

Last Updated : Dec 15, 2023, 4:54 PM IST

ABOUT THE AUTHOR

...view details