ನವದೆಹಲಿ:ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆಯನ್ನು ದೆಹಲಿಯ ಕಚೇರಿಯಲ್ಲಿ ಇಂದು ಕರೆದಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಭಾಗವಹಿಸಲಿದ್ದಾರೆ.
ಕೇಂದ್ರ ಚುನಾವಣಾ ಸಮಿತಿಯು ಬಿಜೆಪಿಯ ನೀತಿ-ನಿರ್ಧರಿತ ಅಂಗವಾಗಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮತ್ತು ಮುಂಬರುವ ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸುವ ನಿರ್ಣಾಯಕ ಪಾತ್ರ ವಹಿಸುತ್ತದೆ. ಚುನಾವಣೆಯ ಅಧಿಕೃತ ಘೋಷಣೆಗೆ ಮುಂಚಿತವಾಗಿ ಸಮಿತಿಯು ಸಭೆ ಸೇರುತ್ತದೆ. ಚುನಾವಣೆಗಳಲ್ಲಿ ಪಕ್ಷ ಯಶಸ್ಸು ಸಾಧಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದೆ. ಜೊತೆಗೆ, ಈಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಯಲಿದೆ ಎಂದೂ ತಿಳಿದುಬಂದಿದೆ.
ಯಾವ ರಾಜ್ಯಗಳಲ್ಲಿ ಚುನಾವಣೆ?:ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಹಲವು ಪಕ್ಷಗಳ ವಿರುದ್ಧ ಕಠಿಣ ಹೋರಾಟ ನಡೆಸಬೇಕಿದೆ. ಈ ಪೈಕಿ ವಿರೋಧ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿರುವ ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷ ಈ ಬಾರಿ ಗೆಲುವು ಸಾಧಿಸುವ ಗುರಿ ಹೊಂದಿದೆ.