ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ "ಜುಮ್ಲಾ ಪಕ್ಷ" ( ಬೊಗಳೆ ಪಕ್ಷ) ಎಂದು ಗೇಲಿ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ದೇಶಾದ್ಯಂತ ಕೇಸರಿ ಶಿಬಿರ ಸೋಲಿಸುವುದಾಗಿ ಪ್ರತಿಪಾದಿಸಿದರು.
ಸಪ್ಟೆಂಬರ್ 30 ರಂದು ನಡೆಯಲಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿಯನ್ನು ಜುಮ್ಲಾ ಪಕ್ಷ, ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ಯಾಕೆ ಅವಕಾಶ ನೀಡಲಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಇನ್ನು ಮುಂದೆ ನಮ್ಮ ಪಕ್ಷ ಬಂಗಾಳಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ, ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಜೆಪಿಯನ್ನು ಎದುರಿಸಲು ರಾಜಕೀಯವಾಗಿ ಟಿಎಂಸಿ ಸಿದ್ಧವಾಗಿದೆ ಎಂದು ಘೋಷಿಸಿದರು.
ಬಿಜೆಪಿ ವಿರುದ್ಧದ ಹೋರಾಟದಲ್ಲಿ ನಮ್ಮ ಪಕ್ಷ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಯವರು ಸುಳ್ಳು ಮತ್ತು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಉಪಚುನಾವಣೆಯ ಸಮಯದಲ್ಲಿ ಅನಾವಶ್ಯಕವಾಗಿ ಅವಾಂತರಗಳನ್ನು ಸೃಷ್ಟಿಸುತ್ತಾರೆ. ಭವಾನಿಪುರದಲ್ಲಿ ಟಿಎಂಸಿ ಅಭ್ಯರ್ಥಿಗೆ ಮತ ಹಾಕುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರವನ್ನು ಉರುಳಿಸಲು ಹೋರಾಡೋಣ ಎಂದು ಅಭಿಷೇಕ್ ಬ್ಯಾನರ್ಜಿ ಕರೆ ಕೊಟ್ಟರು.