ನವದೆಹಲಿ: ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಮತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಈ ವೇಳೆ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಅಧಿಕಾರಿ ಪ್ರಧಾನಿ ಜೊತೆ ಮಾತುಕತೆ ನಡೆಸಿ ಕುತೂಹಲ ಕೆರಳಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಸುವೇಂದು ಅಧಿಕಾರಿ ಇದೇ ಮೊದಲ ಬಾರಿಗೆ ಬಿಜೆಪಿಯ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿಯವರನ್ನು ನಂದಿಗ್ರಾಮದಲ್ಲಿ ಅಧಿಕಾರಿ ಸೋಲಿಸಿದ್ದರು.
ಅಧಿಕಾರಿಯ ತಮ್ಮನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಯನ್ನು ಭೇಟಿಯಾದೆ ಎಂದು ಬರೆದುಕೊಂಡಿದ್ದಾರೆ.
ಸುವೇಂದು ಅಧಿಕಾರಿಕೂಡ ಪ್ರಧಾನಿಯನ್ನು ಭೇಟಿಯಾದ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದೆ. ಅವರ ಅಮೂಲ್ಯವಾದ ಸಮಯವನ್ನು ನನ್ನ ಜೊತೆ ವಿನಿಯೋಗಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಬಂಗಾಳದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುಮಾರು 45 ನಿಮಿಷ ವಿಸ್ತಾರವಾಗಿ ಮಾತನಾಡಿದ್ದೇನೆ. ಬಂಗಾಳದ ಅಭಿವೃದ್ದಿಗಾಗಿ ಅವರ ಸಹಕಾರ ಮತ್ತು ನಿರ್ದೇಶನಗಳನ್ನು ಕೋರಿದ್ದೇನೆ ಎಂದು ತಿಳಿಸಿದ್ದಾರೆ.