ನವ ದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದು, ಇದೇ ವಿಚಾರ ಇಂದು ಸಂಸತ್ತಿನಲ್ಲಿ ಭಾರೀ ಗದ್ದಲ ಎಬ್ಬಿಸಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು "ಭಾರತ್ ತೋಡೋ (ಭಾರತವನ್ನು ವಿಭಜಿಸಿ)" ಎಂದು ಲೇವಡಿ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಖರ್ಗೆ ನಿನ್ನೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.
ರಾಜಸ್ಥಾನದ ಅಲ್ವಾರ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ದೇಶದ ಅತ್ಯಂತ ಹಳೆಯ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ಗೆದ್ದುಕೊಟ್ಟಿದೆ ಮತ್ತು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂಥ ನಾಯಕರು ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ನಿಮ್ಮ ಮನೆಯ ನಾಯಿಯಾದರೂ ಸತ್ತಿದೆಯಾ? ಆದರೂ, ಬಿಜೆಪಿಯವರು ತಮ್ಮನ್ನು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ ಮತ್ತು ನಾವು ಏನನ್ನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿ (ರಾಷ್ಟ್ರ ವಿರೋಧಿಗಳು) ಎಂದು ಕರೆಯಲಾಗುತ್ತದೆ ಎಂದಿದ್ದರು.
ಚೀನಾದೊಂದಿಗಿನ ಗಡಿ ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದಿದ್ದಕ್ಕಾಗಿ ಕೂಡ ಖರ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅವರು ಹೊರಗೆ ಕಾಣಿಸುವಂತೆ ಸಿಂಹದಂತೆ ಮಾತನಾಡುತ್ತಾರೆ, ಆದರೆ ಅವರು ಇಲಿಯಂತೆ ವರ್ತಿಸುತ್ತಾರೆ ಎಂದು ಹೇಳಿದ್ದರು.
ಖರ್ಗೆಯವರ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಬೆಳಗ್ಗೆ ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಖರ್ಗೆ ಕ್ಷಮಾಪಣೆ ಕೇಳಬೇಕೆಂದು ಪಟ್ಟು ಹಿಡಿಯಿತು.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ಅವರು ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಮತ್ತು ಸುಳ್ಳು ಮಾಹಿತಿ ಹರಡಲು ಪ್ರಯತ್ನಿಸಿದ್ದಾರೆ. ಅಲ್ವಾರ್ನಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಆಗ್ರಹಿಸಿದರು.