ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಗೆಲುವು ದಾಖಲಿಸುತ್ತಿದ್ದಂತೆ ಬಿಜೆಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಬೆನ್ನಲ್ಲೇ ಟಿಎಂಸಿ ವಿರುದ್ಧ ಭಾರತೀಯ ಜನತಾ ಪಾರ್ಟಿ ಗಂಭೀರ ಆರೋಪ ಮಾಡಿದೆ.
ಬಂಗಾಳದಲ್ಲಿ ಟಿಎಂಸಿ ಗೆಲ್ಲುತ್ತಿದ್ದಂತೆ ಬಿಜೆಪಿ ಕಚೇರಿಗೆ ಬೆಂಕಿ.. ತೃಣಮೂಲ ಕಾಂಗ್ರೆಸ್ ವಿರುದ್ಧ ಆರೋಪ - ಟಿಎಂಸಿಯಿಂದ ಬಿಜೆಪಿ ಕಚೇರಿಗೆ ಬೆಂಕಿ
ದೀದಿ ನಾಡಲ್ಲಿ ತೃಣಮೂಲ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದು, ಈ ಮಧ್ಯೆ ಬಿಜೆಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಅರಾಂಬಾಗ್ನಲ್ಲಿರುವ ಬಿಜೆಪಿ ಕಚೇರಿಗೆ ಸಂಜೆ ಬೆಂಕಿ ಹಚ್ಚಲಾಗಿದ್ದು, ಇದರಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ ಟ್ವೀಟ್ ಮಾಡಿದ್ದು, ಪಶ್ಚಿಮ ಬಂಗಾಳ ವಿಧಾನಸಭೆ ಫಲಿತಾಂಶ ಬರುತ್ತಿದ್ದಂತೆ ಟಿಎಂಸಿ ಗೂಂಡಾಗಳು ಬಿಜೆಪಿ ಕಚೇರಿ ಸುಟ್ಟು ಹಾಕಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ಬಂಗಾಳದಲ್ಲಿ ನಾವು ಅನುಭವಿಸಬೇಕಾಗಿರುವುದು ಇದೆನಾ? ಎಂದು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ 294 ಕ್ಷೇತ್ರಗಳ ಪೈಕಿ ತೃಣಮೂಲ 216 ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 70+ ಸ್ಥಾನಗಳಲ್ಲಿ ಜಯ ದಾಖಲಿಸಿದೆ.