ನವದೆಹಲಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಕಂದಾಯ ಸಚಿವರಾದ ಆರ್.ಅಶೋಕ್, ಲೋಕೋಪಯೋಗಿ ಖಾತೆ ಸಚಿವರಾದ ಸಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಈ ವೇಳೆ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಎಲೆಕ್ಟ್ರಾನಿಕ್ ಹಾರ್ಡ್ವೇರ್ ಪಾರ್ಕ್ ನಿರ್ಮಾಣ ಕುರಿತು ಚರ್ಚೆ :ಬಳಿಕ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದು, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ನಂತರ ಕೇಂದ್ರ ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಸಹ ಭೇಟಿಯಾದೆವು. ಬೆಂಗಳೂರು-ಕೋಲಾರ ಮಧ್ಯೆ 400 ಎಕರೆ ಜಾಗದಲ್ಲಿ ಎಲೆಕ್ಟ್ರಾನಿಕ್ ಹಾರ್ಡ್ವೇರ್ ಪಾರ್ಕ್ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.
ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಅನ್ನು ರಾಜ್ಯಮಟ್ಟದಲ್ಲಿ ಮಾಡುವ ಬಗ್ಗೆ ಸಲಹೆ ಪಡೆದಿದ್ದೇವೆ. ಅಲ್ಲದೇ ಅದಕ್ಕೆ ಬೇಕಾದ ಸಹಾಯ ಮಾಡುವುದಾಗಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ ಎಂದರು.
ದಾವಸ್ಪೇಟೆ-ಹೊಸೂರು ಸೆಟ್ಲೈಟ್ ಟೌನ್ ರಿಂಗ್ ರೋಡ್ :ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದೆವು. ದಾವಸ್ಪೇಟೆಯಿಂದ ಹೊಸೂರಿನವರೆಗೆ ಸೆಟ್ಲೈಟ್ ಟೌನ್ ರಿಂಗ್ ರೋಡ್ (ಎಸ್ಟಿಟಿಆರ್) ಬಗ್ಗೆ ಚರ್ಚಿಸಿದ್ದೇವೆ. ಭಾರತ ಮಾಲಾ-1ರಲ್ಲಿ ಈ ಯೋಜನೆ ತೆಗೆದುಕೊಂಡಿದ್ದಾರೆ. ಇನ್ನೇನು ಆರು ತಿಂಗಳಲ್ಲಿ ಈ ಕಾಮಗಾರಿ ಆರಂಭವಾಗಲಿದೆ. ಇದು ವಾಹನ ದಟ್ಟಣೆ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದರು.