ನವದೆಹಲಿ:ಮಹಿಳೆಯರ ವಿವಾಹದ ವಯಸ್ಸನ್ನು 18ರಿಂದ 21ಕ್ಕೆ ಏರಿಸಲು ಕೇಂದ್ರ ಸಂಪುಟವು ನಿರ್ಣಯವನ್ನು ಅಂಗೀಕರಿಸಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. 2020ರ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ ಮಹಿಳೆಯರ ಕಾನೂನುಬದ್ಧ ವಿವಾಹದ ವಯಸ್ಸನ್ನು ಹೆಚ್ಚಿಸುವುದಾಗಿ ಹೇಳಿದ್ದರು ಎಂಬುದು ಇಲ್ಲಿ ಗಮನಾರ್ಹ..
ಮೂಲಗಳ ಪ್ರಕಾರ, 18ರಿಂದ 21 ವರ್ಷಕ್ಕೆ ಮಹಿಳೆಯರ ವಿವಾಹದ ವಯಸ್ಸು ಹೆಚ್ಚಿಸಲು ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿದ್ದು, ಶೀಘ್ರದಲ್ಲೇ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ತಿದ್ದುಪಡಿಗಾಗಿ ಸದನದಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈ ಕಾಯ್ದೆಯ ಜೊತೆಗೆ ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆ-1995ರಲ್ಲಿಯೂ ಕೆಲವೊಂದು ಬದಲಾವಣೆಗಳನ್ನು ಮಾಡಲಾಗುತ್ತದೆ ಎನ್ನಲಾಗ್ತಿದೆ.