ರಾಯಪುರ(ಛತ್ತೀಸ್ಗಢ) :ಸಮುದಾಯವೊಂದರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಅವರ ತಂದೆ ನಂದ್ ಕುಮಾರ್ ಬಘೇಲ್ ವಿರುದ್ಧ ರಾಯಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಸರ್ವ್ ಬ್ರಾಹ್ಮಿನ್ ಸಮಾಜ್' ಡಿಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಶನಿವಾರ ರಾತ್ರಿ ನಂದ್ ಕುಮಾರ್ ಬಘೇಲ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡಿಸುವುದು) ಮತ್ತು 505 (1) (b) (ಉದ್ದೇಶಪೂರ್ವಕವಾಗಿ ವಿವಿಧ ಗುಂಪುಗಳ ನಡುವೆ ದ್ವೇಷ ಭಾವನೆ ಬರುವಂತೆ ಮಾಡುವುದು) ಅಡಿಯಲ್ಲಿ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.