ನವದೆಹಲಿ:ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಂದ 25 ಕೋಟಿ ಲಂಚ ಕೇಳಿದ ಆರೋಪದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಮೀರ್ ವಾಂಖೆಡೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ಕಾರ್ಯಚರಣೆ ನಡೆಸಿದ್ದಾರೆ.
2021ರ ಅಕ್ಟೋಬರ್ 2ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದ ಎನ್‌ಸಿಬಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ, ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ)ಯು ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಹೇಳಿದೆ.
ಇದನ್ನೂ ಓದಿ:ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ತನಿಖಾಧಿಕಾರಿ ಸಮೀರ್ ವಾಂಖೆಡೆ ಚೆನ್ನೈಗೆ ವರ್ಗಾವಣೆ
ಮತ್ತೊಂದೆಡೆ, ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರರು ಸೇರಿಕೊಂಡು ಈ ಮಾದಕ ದ್ರವ್ಯ ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ, ವಾಂಖೆಡೆ ಮತ್ತು ಆತನ ಸಹಚರರಿಂದ ಮುಂಗಡವಾಗಿ 50 ಲಕ್ಷ ರೂಪಾಯಿ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಸಿಬಿಐಗೆ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.