ನವದೆಹಲಿ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸುವಂತೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದೆ. ಇದರ ಬೆನ್ನಲೆ ತೇಜಸ್ವಿ ಯಾದವ್ ಅವರಿಗೆ ನೋಟಿಸ್ ಸಹ ಜಾರಿ ಮಾಡಿದೆ.
ಸಿಬಿಐ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ತೇಜಸ್ವಿ ಯಾದವ್ ಅವರಿಗೆ ಸಿಬಿಐ ಮನವಿಯ ಮೇರೆಗೆ ನ್ಯಾಯಾಲಯವು ಜಾಮೀನನ್ನು ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದೆ. ಸೆಪ್ಟೆಂಬರ್ 28ಕ್ಕೆ ಮುಂದಿನ ವಿಚಾರಣೆ ಮುಂದೂಡಿದ್ದು, ಅಷ್ಟರೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಐಆರ್‌ಸಿಟಿಸಿ ಹಗರಣದ ಆರೋಪಿಯಾಗಿರುವ ತೇಜಸ್ವಿ ಯಾದವ್ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಈಗ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ತೇಜಸ್ವಿ ಯಾದವ್ ಅವರು ಉಪಮುಖ್ಯಮಂತ್ರಿ ಆಗಿರುವ ಕಾರಣ ಪ್ರಕರಣದ ಸಾಕ್ಷ್ಯ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ತನ್ನ ಅರ್ಜಿಯಲ್ಲಿ ಹೇಳಿದೆ. ಆದ್ದರಿಂದ ಪ್ರಕರಣದ ತನಿಖೆಗೆ ತೊಂದರೆಯಾಗುತ್ತಿದೆ ಎಂದೂ ಸಿಬಿಐ ಆರೋಪಿಸಿದೆ.