ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಬಿಎಸ್ಸಿ, ಐಸಿಎಸ್ಸಿ 12ನೇ ತರಗತಿ ಪರೀಕ್ಷೆ ನಡೆಸದಿರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸಿಬಿಎಸ್ಇ 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸಮಯಕ್ಕೆ ತಕ್ಕಂತೆ ಉತ್ತಮವಾಗಿ ವ್ಯಾಖ್ಯಾನಿಸಲಾದ ವಸ್ತುನಿಷ್ಠ ಮಾನದಂಡಗಳ ಪ್ರಕಾರ ನಿರ್ಧರಿಸಲು ಕ್ರಮಗಳನ್ನು ತೆಗೆದುಕೊಳ್ಳಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮತ್ತು ಶಾಲಾ ಶಿಕ್ಷಣ ಕಾರ್ಯದರ್ಶಿಗಳು ಹಾಗು ಇತರ ಪ್ರಮುಖ ಶಿಕ್ಷಣ ಅಧಿಕಾರಿಗಳನ್ನು ಭೇಟಿಯಾಗಿ ಮಂಡಳಿಯ ಪರೀಕ್ಷೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ನಿರ್ಧಾರ ಎಂದ ಪ್ರಧಾನಿ:
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 12ನೇ ತರಗತಿಯ ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ. ವ್ಯಾಪಕ ಸಮಾಲೋಚನೆಯ ನಂತರ ವಿದ್ಯಾರ್ಥಿ ಸ್ನೇಹಿ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದು ನಮ್ಮ ಯುವಕರ ಭವಿಷ್ಯ ಮತ್ತು ಆರೋಗ್ಯ ಕಾಪಾಡುತ್ತದೆ ಎಂದಿದ್ದಾರೆ.
ಕೋವಿಡ್ ಪರಿಸ್ಥಿತಿಯು ಶೈಕ್ಷಣಿಕ ವರ್ಷದ ಮೇಲೆ ಪರಿಣಾಮ ಬೀರಿದೆ ಮತ್ತು ಬೋರ್ಡ್ ಪರೀಕ್ಷೆಗಳ ವಿಷಯವು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕವನ್ನು ಉಂಟು ಮಾಡುತ್ತಿದೆ, ಇದನ್ನು ಕೊನೆಗೊಳಿಸಬೇಕಿತ್ತು ಎಂದು ಪ್ರಧಾನಿ ಹೇಳಿದರು.
ಇತ್ತ ಕೋವಿಡ್ ಪರಿಸ್ಥಿತಿ ಸುಧಾರಿಸಿದ ಬಳಿಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅನುಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವರು ಸೇರಿ, ವಾಣಿಜ್ಯ, ಮಾಹಿತಿ ಮತ್ತು ಪ್ರಸಾರ, ಪೆಟ್ರೋಲಿಯಂ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಸೇರಿ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಭಾಗಿಯಾಗಿದ್ದರು.
ಕೊರೊನಾ ನಂತರದ ಅಸ್ವಸ್ಥತೆಯ ಕಾರಣದಿಂದಾಗಿ ಪೋಖ್ರಿಯಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ, ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.