ನವದೆಹಲಿ :ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅನುಕೂಲವಾಗುವಂತೆ ಕಂಟೋನ್ಮೆಂಟ್ ನಿಯಮ ಹಾಗೂ ಬಿಗಿ ಕ್ರಮಗಳನ್ನು ಜೂನ್ 30ರವರೆಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ದೇಶದಲ್ಲಿ ಪಾಸಿಟಿವ್ ಪ್ರಕರಣ ಕಡಿಮೆ ಮಾಡುವ ನಿಟ್ಟಿನಲ್ಲಿ ಬಿಗಿ ಕ್ರಮಕೈಗೊಳ್ಳಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಏಪ್ರಿಲ್ 29ರಂದು ಹೊರಡಿಸಿದ್ದ ಆದೇಶವನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ, ದೇಶದಲ್ಲಿ ಸಕ್ರಿಯ ಪ್ರಕರಣ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ ಎಂದು ನಿರ್ದೇಶಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ದೇಶದಲ್ಲಿ ಕೈಗೊಂಡ ಬಿಗಿ ಕ್ರಮಗಳಲ್ಲಿ ಉತ್ತರ, ದಕ್ಷಿಣ, ಈಶಾನ್ಯ ಭಾಗ ಸೇರಿದಂತೆ ಎಲ್ಲೆಡೆ ಸೋಂಕು ಮತ್ತು ಸಾವು ಪ್ರಕರಣ ಇಳಿಕೆಯಾಗುತ್ತಿವೆ.
ದೇಶದಲ್ಲಿ ಸೋಂಕು ಪ್ರಕರಣ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ಸಕ್ರಿಯ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿವೆ. ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸೋಂಕು ಇಳಿಕೆಯಾಗುತ್ತಿದ್ದರೂ ಕೆಲ ರಾಜ್ಯಗಳಲ್ಲಿ ನಿತ್ಯ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅಂತಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಂಟೇನ್ಮೆಂಟ್ ಮಾದರಿಯಲ್ಲಿ ಬಿಗಿಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಜಿಲ್ಲೆಗಳಲ್ಲಿ ಬಿಗಿ ಕ್ರಮಕ್ಕೆ ಸೂಚನೆ :ದೇಶದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಶೇ.10ಕ್ಕಿಂತಲೂ ಹೆಚ್ಚಿರುವ ಕಡೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಕಡಿಮೆ ಮಾಡಲು ಮುಂದಾಗಿ.
ಕಳೆದ ಒಂದು ವಾರದ ಈಚೆಗೆ ಹಲವು ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ.