ನವದೆಹಲಿ: ದೇಶದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಸಾಧ್ಯತೆಯನ್ನು ಅವಲೋಕಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 18 ಮತ್ತು 22 ರ ನಡುವೆ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದ ಒಂದು ದಿನದ ಬಳಿಕ ಈ ಮಾಹಿತಿ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆ ಕುರಿತು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಈ ಸಂದರ್ಭದಲ್ಲೇ 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ. ಈ ವರ್ಷದ ನವೆಂಬರ್-ಡಿಸೆಂಬರ್ ವೇಳೆಗೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಮತ್ತು ಮುಂದಿನ ವರ್ಷದ ಮೇ-ಜೂನ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
'ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಈ ಹಿಂದೆ ಮಾತನಾಡಿದ್ದ ಪ್ರಧಾನಿ ಮೋದಿ, " ಪ್ರತಿ ತಿಂಗಳು ಒಂದಲ್ಲಾ ಒಂದು ರೀತಿಯ ಚುನಾವಣೆಗಳು ನಡೆಯುತ್ತಿದ್ದು, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಈ ಕಾರಣದಿಂದ ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಬಗ್ಗೆ ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವ ಅವಶ್ಯಕತೆಯಿದೆ. ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಇರಬೇಕೆಂದು" ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವುದನ್ನು ಒತ್ತಿ ಹೇಳುತ್ತದೆ.