ಗುರುಗ್ರಾಮ (ಹರಿಯಾಣ):ನಗರದ ಹೆಸರಾಂತ ಖಾಸಗಿ ಶಾಲೆಯೊಂದರಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ಫ್ಲ್ಯಾಟ್‌ನ 13ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಬಾಲಕ 17 ವರ್ಷ ವಯಸ್ಸಿನವನಾಗಿದ್ದು, ಸೌತ್ ಸಿಟಿ 1 ರ ರಿಟ್ರೀಟ್ ಸೊಸೈಟಿಯಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದನು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕ ತನ್ನ ಅಂತಿಮ ವರ್ಷದ ಪರೀಕ್ಷೆಗಳ ಬಗ್ಗೆ ಹೆಚ್ಚು ಆತಂಕಗೊಂಡು ಸಾವಿನ ಹಾದಿ ತುಳಿದಿದ್ದಾನೆ. ಡೆತ್ನೋಟ್ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕ ಫ್ಲಾಟ್‌ನ ಬಾಲ್ಕನಿಯಿಂದ ಜಿಗಿದಿದ್ದು, ಸೊಸೈಟಿಯ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಓಡಿ ಬಂದು ನೋಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಷ್ಟರಲ್ಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬ್ಯಾಡ್ಮಿಂಟನ್ ಆಡುತ್ತಿದ್ದ ವ್ಯಕ್ತಿ ಸಾವು:ಮಹಾರಾಷ್ಟ್ರದ ನಾಗ್ಪುರದ ಪಚ್ಪೋಲಿ ಎಂಬಲ್ಲಿ 49 ವರ್ಷದ ವ್ಯಕ್ತಿಯೊಬ್ಬರು ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಮೃತಪಟ್ಟಿದ್ದಾರೆ. ಯಾದವ ನಗರದ ನಿವಾಸಿ ಗುನ್ನು ಧರ್ಮು ಲೋಹಾರ ಮೃತರು. ಸೋಮವಾರ ಬೆಳಗ್ಗೆ 6.45ರ ಸುಮಾರಿಗೆ ಸ್ನೇಹಿತನೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ದಿಢೀರ್ ಕುಸಿದುಬಿದ್ದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಸೆಂಟ್ರಲ್ ರೈಲ್ವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಚೆಸ್ಕಾಂ ಮಹಿಳಾ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ:ಮಡಿಕೇರಿ ಚೆಸ್ಕಾಂನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿನ ಎಇಒ ಕರೆ ಮಾಡಿ ವಾಟ್ಸಪ್ ಚಾಟ್ ಮಾಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ದ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೌಟುಂಬಿಕ ಕಲಹ:ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ