ಅನಂತನಾಗ್ (ಜಮ್ಮು ಮತ್ತು ಕಾಶ್ಮೀರ) :ಕೆಲ ದಿನಗಳಿಂದಶಾಂತವಾಗಿದ್ದ ಜಮ್ಮು ಕಾಶ್ಮೀರದಲ್ಲಿ ಮತ್ತೆ ಅಶಾಂತಿ ಮೂಡಿಸಲು ಉಗ್ರರು ಸಂಚು ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಸುಳಿವು ಸೇನೆಗೆ ಸಿಕ್ಕಿದೆ. ಹೀಗಾಗಿ ಕೋಕರ್ನಾಗ್ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಆರಂಭಿಸಿದೆ. ಒಂದೊಂದು ಮನೆಯನ್ನು ಸೇನೆ ಮತ್ತು ಅರೆಸೇನಾ ಪಡೆಯ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಒಳ ಬರುವ ಮತ್ತು ಹೊರ ಹೋಗುವ ಎಲ್ಲ ಜನರನ್ನು ತಪಾಸಣೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ಇದಕ್ಕೂ ಮುನ್ನ ನವೆಂಬರ್ 17 ರಂದು, ರಜೌರಿಯ ಗಡಿ ಜಿಲ್ಲೆಯ ಬುಧಾಲ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಗಳು ಆ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದನು.