ಲಖನೌ(ಉತ್ತರ ಪ್ರದೇಶ):ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೂತ್ರಕೋಶ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಅಖಿಲೇಶ್ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರನ್ನು ಇತ್ತೀಚೆಗಷ್ಟೇ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಆದರೆ, ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಎಂದು ಭಾನುವಾರ ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್, ಪುತ್ರ ಅರ್ಜುನ್, ಮುಲಾಯಂ ಅವರ ಕಿರಿಯ ಸಹೋದರ ಶಿವಪಾಲ್ ಸಿಂಗ್ ಯಾದವ್, ಮುಲಾಯಂ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಕೂಡ ಮುಲಾಯಂ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮುಲಾಯಂ ಸಿಂಗ್ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ತಂದೆಯ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಲಾಯಂ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಹಾರೈಸಿದರು ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಮೇದಾಂತ ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಮಾತನಾಡಿ, ಮುಲಾಯಂ ಸಿಂಗ್ ಯಾದವ್‌ಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.