ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಸ್ಥಾನಕ್ಕೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಇಂದು ಅಧಿಸೂಚನೆ ಪ್ರಕಟಗೊಂಡಿದೆ. ಸೆಪ್ಟೆಂಬರ್ 24 ರಿಂದ 30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಅಕ್ಟೋಬರ್ 8 ಕೊನೆಯ ದಿನ. ಕೊನೆಯದಾಗಿ ರೇಸ್ನಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳ ಹೆಸರು ಅವತ್ತೇ ಘೋಷಣೆಯಾಗಲಿದೆ. ಅಕ್ಟೋಬರ್ 17ರಂದು ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 19ರಂದು ಫಲಿತಾಂಶ ಪ್ರಕಟಗೊಳ್ಳುತ್ತದೆ.
ಇದನ್ನೂ ಓದಿ:ಶಶಿ ತರೂರ್ vs ಅಶೋಕ್ ಗೆಹ್ಲೋಟ್: ಕಿಂಗ್ 'Cong' ಕೌನ್?
ರೇಸ್ನಲ್ಲಿ ದಿಗ್ವಿಜಯ್ ಸಿಂಗ್ ಹೆಸರು: ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದಲ್ಲಿ ಇಲ್ಲಿಯವರೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೆಸರು ಮಾತ್ರ ಮುಂಚೂಣಿಯಲ್ಲಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆವೊಂದರಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಹೆಸರು ಕೇಳಿ ಬಂದಿದೆ. ಇಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಇಂಗಿತ ಹೊರಹಾಕಲಿದ್ದಾರೆ ಎನ್ನಲಾಗ್ತಿದೆ. ಮತ್ತೊಂದೆಡೆ ಈ ಸ್ಥಾನಕ್ಕೆ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರ ಮನವೊಲಿಕೆ ಕಾರ್ಯ ಸಹ ನಡೆಯುತ್ತಿದೆ ಎನ್ನಲಾಗಿದೆ.
ಈ ಹಿಂದೆ 2017ರಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದರು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲುಂಡಿದ್ದು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ, ಸೋನಿಯಾ ಗಾಂಧಿ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.