ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಿರಿಯ ನಾಯಕರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ಮುಂದುವರಿಸಿದ್ದಾರೆ.
ದೇಶಾದ್ಯಂತ ಕಾಂಗ್ರೆಸ್ ನಾಯಕರ ತೀವ್ರ ಪ್ರತಿಭಟನೆ ನಡುವೆ, ವಯನಾಡು ಸಂಸದರೂ ಆಗಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಜೂನ್ 13 ರಿಂದ 15 ರವರೆಗೆ ವಿಚಾರಣೆ ನಡೆಸಿತ್ತು. ಸುಮಾರು 30 ಗಂಟೆಗಳಿಗೂ ಹೆಚ್ಚಿನ ಕಾಲ ಅವರನ್ನು ಪ್ರಶ್ನೆ ಮಾಡಿತ್ತು. ಇಂದೂ ಕೂಡಾ ಇಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸುತ್ತಿದ್ದಾರೆ.
ಗಮನಾರ್ಹ ವಿಷಯ ಎಂದರೆ ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಅವರು ಶುಕ್ರವಾರದ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಅಧಿಕಾರಿಗಳನ್ನು ಕೋರಿಕೊಂಡಿದ್ದರು. ಈ ಮನವಿಗೆ ಒಪ್ಪಿಗೆ ನೀಡಿದ್ದ ಇಡಿ ಅಧಿಕಾರಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.