ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೆಲವೊಂದು ಮಹತ್ವದ ವಿಚಾರ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.
ದೆಹಲಿಗೆ ಬಂದು 13 ತಿಂಗಳಾಗಿದ್ದು, ಪಕ್ಷ ಸಂಘಟನೆ ವಿಚಾರವಾಗಿ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕಾಗಿ ಯಾವೆಲ್ಲ ರೂಪುರೇಷೆ ರಚನೆ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮತ್ತೊಂದು ಅವಧಿಗೆ ಅಧಿಕಾರ ವಹಿಸಿಕೊಳ್ಳುವಂತೆ ಕೂಡಾ ಮನವಿ ಮಾಡಿದ್ದೇನೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.