ದಿಂಡಿಗಲ್ (ತಮಿಳುನಾಡು):2019ರ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ತಮಿಳುನಾಡು ಕಾಂಗ್ರೆಸ್ ಜಿಲ್ಲಾಧ್ಯಕ್ಷರೊಬ್ಬರು ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಾಗಿದೆ.
ಏಪ್ರಿಲ್ 6 ರಂದು ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ರಾಹುಲ್ ಗಾಂಧಿಗೆ ವಿಧಿಸಲಾದ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ದಿಂಡಿಗಲ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್, ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಾನೆ. "ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ನಮ್ಮ ನಾಯಕ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶ ಎಚ್.ವರ್ಮಾ ಅವರ ನಾಲಿಗೆಯನ್ನು ಕತ್ತರಿಸುತ್ತೇವೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಮಣಿಕಂದನ್ ವಿರುದ್ಧ ಪ್ರಕರಣ ದಾಖಲಾಗಿದೆ. "ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 3, 153 ಬಿ ಸೇರಿದಂತೆ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಪ್ರಕರಣವೇನು?:2019 ರ ಲೋಕಸಭಾ ಚುನಾವಣೆಯ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ 'ಮೋದಿ' ಉಪನಾಮದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸೂರತ್ ನ್ಯಾಯಾಲಯದಲ್ಲಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ವರ್ಮಾ ಅವರಿದ್ದ ಪೀಠ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು.