ನವದೆಹಲಿ:ಉದ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪ ಸಂಬಂಧ ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸಂಸದರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಸಂಸತ್ ಭವನದಿಂದ ಇಡಿ ಕಚೇರಿಯವರೆಗೆ ಮೆರವಣಿಗೆ ಮೂಲಕ ಸದಸ್ಯರು ಹೊರಟಿದ್ದು, ವಿಜಯ್ ಚೌಕ್ ಮುಂದೆ ತಡೆ ಹಿಡಿಯಲಾಗಿದೆ.
ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಭ್ರಷ್ಟಾಚಾರದ ಆರೋಪಗಳ ಕುರಿತು ಅದಾನಿ ಗ್ರೂಪ್ ವಿರುದ್ಧ ತನಿಖೆಯನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಪ್ರತಿಪಕ್ಷಗಳು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ 17 ವಿರೋಧ ಪಕ್ಷಗಳ ಸಂಸದರು ಪಾಲ್ಗೊಂಡಿದ್ದಾರೆ.
ಯಾವ ಪಕ್ಷಗಳು ಭಾಗಿ?: ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಆಮ್ ಆದ್ಮಿ ಪಕ್ಷ (ಎಎಪಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಜನತಾ ದಳ (ಯುನೈಟೆಡ್), ಸಮಾಜವಾದಿ ಪಕ್ಷ (ಎಸ್‌ಪಿ), ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ). ), ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ), ರಾಷ್ಟ್ರೀಯ ಲೋಕದಳ (ಆರ್ಎಲ್ಡಿ), ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ) ಸೇರಿ ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಜಂಟಿಯಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿವೆ. ಪ್ರತಿಭಟನೆಯಿಂದ ಟಿಎಂಸಿ, ಎನ್ಸಿಪಿ ದೂರ ಉಳಿದಿವೆ.