ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಇಂದು (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಬೆಳಗ್ಗೆ 9:30ಕ್ಕೆ ಗೆದ್ದ ಎಲ್ಲಾ ಶಾಸಕರ ಸಭೆಯನ್ನು ಕರೆಯಲಾಗಿದೆ.
ಇಂದು ಪ್ರಕಟವಾದ ನಾಲ್ಕು ರಾಜ್ಯಗಳ ಪೈಕಿ ಹಿಂದಿ ಪ್ರಾಬಲ್ಯದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ದಕ್ಷಿಣ ಭಾರತದ ತೆಲಂಗಾಣದಲ್ಲಿ ಕಾಂಗ್ರೆಸ್ ಜಯ ದಾಖಲಿಸಿದೆ. ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಭರ್ಜರಿ ಗೆಲುವು ಕಂಡಿದ್ದ ಕಾಂಗ್ರೆಸ್ ಈಗ ಆರು ತಿಂಗಳ ಅವಧಿಯಲ್ಲಿ ದಕ್ಷಿಣದ ಭಾರತದ ಎರಡನೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಾಗಿದೆ. ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದ ಕೆಸಿಆರ್ ಆಸೆ ಭಗ್ನವಾಗಿದೆ.
ರಾಜ್ಯದ ಎರಡನೇ ಸಿಎಂ ಆಗಲಿದ್ದಾರೆ ರೇವಂತ್ ರೆಡ್ಡಿ:ಪ್ರಸ್ತುತ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಕೆಸಿಆರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುಂದಾಳತ್ವ ವಹಿಸಿಕೊಂಡಿದ್ದ 56 ವರ್ಷ ವಯಸ್ಸಿನ ರೇವಂತ್ ರೆಡ್ಡಿ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ. ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆಯುವುದು ಸ್ಪಷ್ಟವಾಗುತ್ತಿದ್ದಂತೆ ರೇವಂತ್ ರೆಡ್ಡಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು. ಸೋಮವಾರವೇ ಪ್ರಮಾಣವಚನ ಸಮಾರಂಭ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು ಕೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.