ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಚುನಾವಣಾ ವೇಳಾಪಟ್ಟಿಗೆ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ (ಸಿಡಬ್ಲ್ಯೂಸಿ)ಯು ಅನುಮೋದನೆ ನೀಡಿದೆ.
ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಬಗ್ಗೆ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಡಿಸಲಾಗುವುದು. ಈ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 24ರಂದು ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ.
ಇಂದು ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸಭೆಯು ಸುಮಾರು 30 ನಿಮಿಷಗಳ ಕಾಲ ನಡೆಯಿತು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಗತ್ಯವಿದ್ದರೆ ಮತಗಳ ಎಣಿಕೆ ಅಕ್ಟೋಬರ್ 19ರಂದು ನಡೆಯಲಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ 24ರಂದು ಆರಂಭವಾಗುವ ನಾಮಪತ್ರ ಸಲ್ಲಿಕೆಯು ಸೆಪ್ಟೆಂಬರ್ 30ರವರೆಗೂ ನಡೆಯಲಿದೆ. ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 17ರಂದು ಎಲ್ಲ ಪ್ರದೇಶ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಮತದಾನ ಜರುಗಲಿದೆ ಎಂದು ಮಾಹಿತಿ ನೀಡಿದರು.
ಈ ಚುನಾವಣಾ ವೇಳಾಪಟ್ಟಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ತಿಳಿಸಿದರು. ಇನ್ನು, ಆನ್‌ಲೈನ್ ಮೂಲಕ ನಡೆದ ಸಿಡಬ್ಲ್ಯೂಸಿ ಸಭೆಯು ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿರುವ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸೋನಿಯಾ ಗಾಂಧಿ ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು.
ಇತ್ತ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಕೆ.ಸಿ.ವೇಣುಗೋಪಾಲ್, ರಾಜಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಿ-23 ಭಿನ್ನಮತೀಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವರಾದ ಜೈರಾಮ್ ರಮೇಶ್, ಮುಕುಲ್ ವಾಸ್ನಿಕ್ ಮತ್ತು ಪಿ.ಚಿದಂಬರಂ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಕಾಂಗ್ರೆಸ್ ಹಾಳುಗೆಡವಲು ರಾಹುಲ್ ಕಾರಣ : G 23ನ ಕಾಂಗ್ರೆಸ್ ನಾಯಕ ಖಾನ್ ರಾಜೀನಾಮೆ