ನವದೆಹಲಿ:ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ನಲ್ಲಿ ಭಾರಿ ಚರ್ಚೆಗಳು ನಡೆಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚಿಸಿದ ನಂತರ ಖರ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕರ್ನಾಟಕ ಸಿಎಂ ಸ್ಥಾನದ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಅಧ್ಯಕ್ಷರು ಎಲ್ಲ ಸಿಎಂ ಆಕಾಂಕ್ಷಿಗಳನ್ನು ಭೇಟಿ ಮಾಡಿದ್ದಾರೆ. ಈಗ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿಯೇ ನಾಳೆ ನೂತನ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ ಎಂದು ಮೂಲಗಳು ಹೇಳಿವೆ.
ಮುಖ್ಯಮಂತ್ರಿ ಹುದ್ದೆಗೆ ಹೆಸರು ಮಾತ್ರ ಇನ್ನೂ ಸಸ್ಪೆನ್ಸ್:ಇದಕ್ಕೂ ಮುನ್ನ ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಭಾವ್ಯ ಅಭ್ಯರ್ಥಿಗಳಾದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹಾಗೂ ಶಾಸಕರಾದ ಜಮೀರ್ ಅಹ್ಮದ್, ಭೈರತಿ ಸುರೇಶ್, ಹಿರಿಯ ನಾಯಕ ಕೆ.ಜೆ. ಜಾರ್ಜ್ ಅವರೊಂದಿಗೆ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶದ ಬೆನ್ನೆಲೆಯಲ್ಲಿ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಿರಿಯ ನಾಯಕ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೇಸ್‌ನಲ್ಲಿ ಇದ್ದಾರೆ. ಆದ್ರೆ ಮುಖ್ಯಮಂತ್ರಿ ಹುದ್ದೆಗೆ ಹೆಸರು ಮಾತ್ರ ಇನ್ನೂ ಸಸ್ಪೆನ್ಸ್ ಇದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಸೋಮವಾರ ಸಲ್ಲಿಸಿದ ಕಾಂಗ್ರೆಸ್ ಕೇಂದ್ರ ವೀಕ್ಷಕರ ವರದಿಯನ್ನು ಪರಿಶೀಲಿಸಿದ ನಂತರ ಅವರು ತಮ್ಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಆದರೆ, ಅನಾರೋಗ್ಯದ ಕಾರಣ ನೀಡಿ ಸೋಮವಾರ ಸಂಜೆ ರಾಷ್ಟ್ರ ರಾಜಧಾನಿ ಪ್ರವಾಸವನ್ನು ರದ್ದುಗೊಳಿಸಿದ್ದ ಶಿವಕುಮಾರ್ ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ.