ಲಖನೌ(ಉತ್ತರ ಪ್ರದೇಶ): ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಇದರ ಮಧ್ಯೆ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಹತ್ವದ ಘೋಷಣೆ ಹೊರಹಾಕಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೇ. 40ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ನಡೆಯುವ ಹುನ್ನಾರಕ್ಕೆ ನಾವು ಯಾವುದೇ ರೀತಿಯಲ್ಲೂ ಅವಕಾಶ ನೀಡುವುದಿಲ್ಲ ಎಂದಿರುವ ಪ್ರಿಯಾಂಕಾ, ಪಕ್ಷ ಮಹಿಳೆಯರಿಗೆ ಸಿಂಹಪಾಲು ನೀಡಲು ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.
ಇದನ್ನೂ ಓದಿರಿ:ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಾಬುಲ್ ಸುಪ್ರಿಯೋ
ಉತ್ತರ ಪ್ರದೇಶದಲ್ಲಿ ನಾಳೆಯಿಂದ ಕಾಂಗ್ರೆಸ್ ಪಕ್ಷ ಪ್ರತಿಜ್ಞಾ ಯಾತ್ರೆ ಹಮ್ಮಿಕೊಂಡಿದ್ದು, ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕಾ, ಅದರ ರೂಪು-ರೇಷಗಳ ಕುರಿತು ಮಾಹಿತಿ ಹಂಚಿಕೊಂಡರು. ಪ್ರತಿಜ್ಞಾಯಾತ್ರೆಯಲ್ಲಿ ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಸರ್ಕಾರ ನಡೆಸುತ್ತಿರುವ ಯೋಗಿ ಆದಿತ್ಯನಾಥ್ ಅವರ ದುರಾಡಳಿತ, ಲಖಿಂಪುರ್ ಹಲ್ಲೆ ಸೇರಿದಂತೆ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲುವುದಾಗಿದೆ ಎಂದರು.
ಇದೇ ವೇಳೆ, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ತಯಾರಿ ಅಂತಿಮ ಹಂತದಲ್ಲಿದ್ದು, ವಿಶಿಷ್ಟ ಯೋಜನೆಗಳೊಂದಿಗೆ ಪ್ರಣಾಳಿಕೆ ರಿಲೀಸ್ ಆಗಲಿದೆ ಎಂಬ ಮಾಹಿತಿ ಹಂಚಿಕೊಂಡರು. ಮುಂದಿನ ವರ್ಷ ಆರಂಭದಲ್ಲಿ ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ್ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ.