ನವದೆಹಲಿ: ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಮಕ್ಕಳಿಗೆ ಲಭ್ಯವಿರುವ ಏಕೈಕ ಕೋವಿಡ್-19 ಲಸಿಕೆಯಾಗಿದ್ದು, 15-18 ವರ್ಷ ವಯಸ್ಸಿನವರಿಗೆ ಜ.3 ರಿಂದ ಲಸಿಕೆ ನೀಡಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅಲ್ಲದೇ, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಹಾಗೂ ವಯೋಸಹಜ ಇತರೆ ಖಾಯಿಲೆಗಳಿಂದ ಬಳಲುತ್ತಿರುವ 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಮೊದಲು ನೀಡಿದ ಲಸಿಕೆಯನ್ನೇ 3ನೇ ಡೋಸ್ ಆಗಿ ನೀಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, 15-18 ವರ್ಷದೊಳಗಿನ ಮಕ್ಕಳಿಗೆ ಜ.3 ರಿಂದ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದರು. ಅಲ್ಲದೇ, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಪ್ರಕಟಿಸಿದ್ದರು.
ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯರ ಸಲಹೆಯ ಮೇರೆಗೆ ಜ. 10ರಿಂದ 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಮತ್ತು ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.