ಬುಡೌನ್ (ಉತ್ತರಪ್ರದೇಶ) :ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು 8 ತಿಂಗಳ ಮಗುವನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ದಾತಾಗಂಜ್ನ ಕೊತ್ವಾಲಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪತ್ನಿ ಮತ್ತು ಮಗು ಮನೆಯಲ್ಲಿ ಮಲಗಿದ್ದ ವೇಳೆ ಆರೋಪಿ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಮೃತರನ್ನು ಖುಷ್ಬೂ ಹಾಗೂ 8 ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ಅಖಿಲೇಶ್ ಅಲಿಯಾಸ್ ಅಜಯ್ ಕೊಲೆಗೈದ ಆರೋಪಿ.
ಘಟನೆ ಸಂಬಂಧ ಮಾಹಿತಿ ನೀಡಿದ ಪೊಲೀಸರು, ಇಲ್ಲಿನ ದಾತಾಗಂಜ್ ಎಂಬಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಹೆಣ್ಣು ಮಗುವನ್ನು ಹತ್ಯೆ ಮಾಡಿದ್ದಾನೆ. ಈ ಸಂಬಂಧ ಮಾಹಿತಿ ದೊರೆತ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಅಖಿಲೇಶ್ನನ್ನು ಬಂಧಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.
ಆರೋಪಿ ಅಖಿಲೇಶ್ ಕಳೆದ ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದನು. ಈ ಸಂದರ್ಭ ಬಿಹಾರ ಮೂಲದ ಖುಷ್ಬು ಎಂಬಾಕೆಯ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಖುಷ್ಬು ಪೋಷಕರು ದೆಹಲಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.