ಶ್ರೀನಗರ, ಜಮ್ಮು ಕಾಶ್ಮೀರ: ಸಿಆರ್‌ಪಿಎಫ್ ಶಿಬಿರದ ಮೇಲೆ ಅಪರಿಚಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ ಪರಿಣಾಮದಿಂದಾಗಿ ಓರ್ವ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶ್ರೀನಗರದ ಸನತ್ ನಗರ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 132ನೇ ಬೆಟಾಲಿಯನ್ ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಈ ವೇಳೆ ಸಿಆರ್‌ಪಿಎಫ್ ಕಾನ್‌ಸ್ಟೇಬಲ್ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸಿಆರ್‌ಪಿಎಫ್ ವಕ್ತಾರ ಅಭಿರಾಮ್ ಈಟಿವಿ ಭಾರತ್ಗೆ ಮಾಹಿತಿ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಈಗಾಗಲೇ ಹೈ-ಸೆಕ್ಯುರಿಟಿ ಘೋಷಣೆ ಮಾಡಲಾಗಿದೆ. ದಾಳಿಯ ನಂತರ ನಂತರ ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಅಪರಿಚಿತ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಭಿರಾಮ್ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ಮುಂಜಾನೆಯೂ ಉಗ್ರರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಸಿಆರ್‌ಪಿಎಫ್ ಹೆಡ್ ಕಾನ್‌ಸ್ಟೆಬಲ್ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದರು.
ಇದನ್ನೂ ಓದಿ:ಪಾಕ್ನ ಕರಾಚಿಯಲ್ಲಿ ಗ್ರೆನೇಡ್ ದಾಳಿ: ನಾಲ್ಕು ಮಕ್ಕಳು, ಆರು ಮಹಿಳೆಯರ ದುರ್ಮರಣ