ನಳಂದಾ(ಬಿಹಾರ): ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿರುವ ಘಟನೆ ಜಿಲ್ಲೆಯ ಬಿಹಾರ್ ಶರೀಫ್ನ ಪಹರ್ಪುರ್ ಎಂಬಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಕಚ್ಚಾ ಬಾಂಬ್ ತಯಾರಿಸುತ್ತಿದ್ದ ಕೆಲವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಫೋಟದ ಬಳಿಕ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ನಿವಾಸಿ ವಿಶಾಲ್ ಕುಮಾರ್, ಇಲ್ಲಿನ ಮನೆಯೊಂದರಲ್ಲಿ ಸ್ಫೋಟದ ಶಬ್ದವನ್ನು ಕೇಳಿದೆವು. ಸ್ಫೋಟದ ಬಳಿಕ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಬಳಿಕ ಸುಮಾರು 15 ರಿಂದ 20 ನಿಮಿಷಗಳ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಗಾಯಾಳುಗಳನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆ ಬಳಿಕ ನಳಂದಾ ಜಿಲ್ಲಾಧಿಕಾರಿ ಶಶಾಂಕ್ ಶುಭಂಕರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್, ಸ್ಪೋಟದ ಸಂಬಂಧ ಕೂಲಂಕುಷ ತನಿಖೆ ಅಗತ್ಯವಿದೆ. ಸ್ಥಳದಲ್ಲಿ ಸ್ಫೋಟ ಸಂಭವಿಸಿರುವ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ನಾವು ಸ್ಥಳಕ್ಕೆ ಆಗಮಿಸಿದಾಗ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಈ ಬಗ್ಗೆ ತನಿಖೆ ನಡೆಸಲು ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ. ಇವರ ವರದಿ ಆಧರಿಸಿ ಘಟನೆ ಸತ್ಯಾಸತ್ಯತೆ ತಿಳಿದುಬರಲಿದೆ. ನಾವು ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ :ಬಾಂಬ್ ಸ್ಫೋಟ ಪ್ರಕರಣ: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್ಐಎ ಮಿಂಚಿನ ದಾಳಿ