ಕೋಟಾ (ರಾಜಸ್ಥಾನ): ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್), ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (ಜೆಇಇ ಮೇನ್ಸ್) ಮತ್ತು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ವಿಲೀನ ಮಾಡುವುದಿಲ್ಲ. ಈ ಮೂರು ಪರೀಕ್ಷೆಗಳನ್ನು ವಿಲೀನಗೊಳಿಸುವ ಯಾವುದೇ ಪ್ರಸ್ತಾವನೆ ಕೂಡ ಇಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ.
ರಾಜಸ್ಥಾನದ ಕೋಟಾದಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳಿಗೆ ತಯಾರಿಗಾಗಿ ಬಂದಿರುವ ವಿವಿಧ ರಾಜ್ಯಗಳ ವಿದ್ಯಾರ್ಥಿಗಳೊಂದಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಸಂವಾದ ನಡೆಸಿದರು. ಈ ವೇಳೆ ನೀಟ್, ಜೆಇಇ ಮೇನ್ಸ್ ಹಾಗೂ ಸಿಯುಇಟಿ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿದರು. ಈಗ ಸಚಿವರು ವಿದ್ಯಾರ್ಥಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.