ನವದೆಹಲಿ :ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜಾತಿ ಆಧಾರಿತ ಲೆಕ್ಕಾಚಾರ ಮತ್ತು ಚುನಾವಣಾ ಕಾರ್ಯತಂತ್ರಗಳು ಸೇರಿದಂತೆ ಇತರ ಕೆಲವು ವಿಷಯಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಕರೆಯಲಾಗಿದ್ದು, ಈಗಾಗಲೇ ಸಭೆ ಆರಂಭವಾಗಿದೆ.
ಇಂದು ನಡೆಯಲಿರುವ ಈ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಲವು ಹಿರಿಯ ನಾಯಕರು ಭಾಗಿಯಾಗಿದ್ದಾರೆ.
ಒಂದೆಡೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಇತ್ತ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅನ್ನು ಹೊರಹಾಕಲು ಯೋಜನೆ ಸಿದ್ಧಪಡಿಸುತ್ತಿದೆ.
ಈ ಮಧ್ಯೆ, ಆಡಳಿತಾರೂಢ ಬಿಜೆಪಿಯು ಕಾಂಗ್ರೆಸ್ ವಿರುದ್ಧ ತನ್ನ ವಾಗ್ದಾಳಿಯನ್ನು ಮುಂದುವರೆಸಿದೆ. ಕಾಂಗ್ರೆಸ್ ಪಕ್ಷವು ಎಂದಿಗೂ ಜಾತಿ ಗಣತಿಯ ಪರವಾಗಿಲ್ಲ ಎಂದು ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಸಂಸತ್ತಿನಲ್ಲಿ ಮಂಡಲ್ ಆಯೋಗವನ್ನು ವಿರೋಧಿಸಿದ್ದರು. ಆದರೆ, ಇದೀಗ ಬಿಜೆಪಿಯ ಹಿಂದುತ್ವದ ಅಜೆಂಡಾ ಎದುರಿಸುವ ಸಲುವಾಗಿ ಜಾತಿ ಗಣತಿಗೆ ಒತ್ತಾಯಿಸಲು ಕಾಂಗ್ರೆಸ್ ತಾತ್ವಿಕ ನಿಲುವನ್ನು ತೆಗೆದುಕೊಂಡಿದೆ ಎಂದು ಆರೋಪಿಸಿದೆ.