ನವದೆಹಲಿ: ಚೀನಾ, ಜಪಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಮತ್ತೆ ಕೋವಿಡ್ ವೈರಸ್ ಉಲ್ಬಣಗೊಳ್ಳುತ್ತಿದೆ. ಪರಿಣಾಮ ದೇಶದಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು ಮತ್ತು ಪ್ರಸ್ತುತ ರಾಷ್ಟ್ರದಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಪರಿಶೀಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಐದು ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಬುಧವಾರ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ವರದಿಯಲ್ಲಿ ತಿಳಿಸಿದೆ.
ಸದ್ಯಕ್ಕೆ ನಗರದಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 0.19 ರಷ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ 8 ಮಂದಿ ರೋಗಿಗಳು ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 19,80,555 ಕ್ಕೆ ಏರಿದೆ. ಹೋಮ್ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ 19 ರಷ್ಟಿದೆ.