ನವದೆಹಲಿ: ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮೃತರ ಕುಟುಂಬಗಳಿಗೆಪರಿಹಾರ ಘೋಷಣೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.
ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತವಾಗಿದೆ. ಬಡವರು ಬಹಳಷ್ಟು ಕಷ್ಟಪಟ್ಟು ತಮ್ಮ ಜೀವನ ಸಾಗಿಸುತ್ತಾರೆ. ಈ ಘಟನೆಯಿಂದ ನನಗೆ ನೋವಾಗಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಮೃತ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ನೀಡುವುದಾಗಿ ಹೇಳಿರುವ ಸಿಎಂ, ಗುಡಿಸಲು ಸುಟ್ಟು ಹೋಗಿರುವ ಕುಟುಂಬಗಳಿಗೆ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.