ನವದೆಹಲಿ: ರಾಷ್ಟ್ರ ರಾಜಧಾನಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯಿರುವ ಕಟ್ಟಡವೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 27 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ನಿನ್ನೆ ರಾತ್ರಿ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿ, ವಶಕ್ಕೆ ತೆಗೆದುಕೊಂಡಿದ್ದಾರೆ.
ದುರಂತ ಸಂಭವಿಸಿದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಸುಮಾರು 60-70 ಜನರನ್ನು ಬಚಾವ್ ಮಾಡಲಾಗಿದೆ. ಇನ್ನೂ ಕೆಲವರು ಒಳಗೆ ಸಿಲುಕಿಕೊಂಡಿರುವ ಶಂಕೆ ಇದೆ. ಮೃತರ ವಿವರ, ಪತ್ತೆ ಕಾರ್ಯ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಸಿಟಿವಿ ಕ್ಯಾಮೆರಾ ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯನ್ನು ಹೊಂದಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಂಪನಿಯ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸಲಾಗಿದೆ. ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಿದ್ದಾರೆ. ಈ ಕಟ್ಟಡದ ಮಾಲೀಕರನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಆದಷ್ಟು ಬೇಗ ಕಟ್ಟಡದ ಮಾಲೀಕನನ್ನು ಬಂಧಿಸಲಾಗುವುದು ಎಂದು ಡಿಸಿಪಿ ಸಮೀರ್ ಶರ್ಮಾ ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವಾರು ರಾಜಕಾರಣಿಗಳು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.