ನವದೆಹಲಿ: ಪಾಕಿಸ್ತಾನದಲ್ಲಿ ಸಿಖ್ ಸಮುದಾಯದ ನಾಗರೀಕರ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದು ಆಘಾತಕಾರಿ ಮತ್ತು ಶೋಚನೀಯ ಸಂಗತಿ ಎಂದು ಕರೆದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಕಿಸ್ತಾನ ಸರ್ಕಾರದ ಬಗ್ಗೆ ಅಸಮಧಾನಗೊಂಡಿದ್ದು, ಹತ್ಯೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಪ್ರಕ್ಷುಬ್ಧ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ ಭಾನುವಾರ ಇಬ್ಬರು ಸಿಖ್ ಉದ್ಯಮಿಗಳನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಸಲ್ಜೀತ್ ಸಿಂಗ್(42) ಹಾಗೂ ರಂಜೀತ್ ಸಿಂಗ್(38) ರನ್ನು ಬೆಳಗ್ಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾಳಿ ಮಾಡಿ ಸ್ಥಳದಲ್ಲೇ ಕೊಂದಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ನಾವು ಪಾಕಿಸ್ತಾನ ಸರ್ಕಾರದೊಂದಿಗೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದ್ದೇವೆ. ನಾವು ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಮತ್ತು ಈ ಶೋಚನೀಯ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ನೀಡುತ್ತೇವೆ. ಪಾಕಿಸ್ತಾನ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತದೆ, ಅಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ನೋಡಿಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.