ಚಂಡೀಗಢ:ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆಗೆ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ಮೇಲೆ ನೇರ ದಾಳಿ ನಡೆಸುತ್ತಿದೆ ಎಂದು ಹೇಳಿರುವ ಅವರು, ಈ ನಿರ್ಧಾರವನ್ನು ಶೀಘ್ರವಾಗಿ ಹಿಂಪಡೆಯಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಹಾದುಹೋಗುವ 50 ಕಿಮೀ ವ್ಯಾಪ್ತಿಯಲ್ಲಿ ಬಿಎಸ್‌ಎಫ್‌ಗೆ ಹೆಚ್ಚುವರಿ ಅಧಿಕಾರ ನೀಡುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಅಮಿತ್ ಅವರನ್ನು ಒತ್ತಾಯಿಸುತ್ತೇನೆ ಎಂದು ಚನ್ನಿ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ನಮ್ಮ ಸೈನಿಕರು ಕಾಶ್ಮೀರದಲ್ಲಿ ಉಗ್ರರಿಂದ ಹುತಾತ್ಮರಾಗುತ್ತಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಪಂಜಾಬ್‌ಗೆ ಹೆಚ್ಚು ಹೆಚ್ಚು ಶಸ್ತ್ರಾಸ್ತ್ರಗಳು ಮತ್ತು ಮಾದಕ ದ್ರವ್ಯಗಳನ್ನು ಬರುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಬಿಎಸ್ಎಫ್ ಶಕ್ತಿ ಹೆಚ್ಚಿಸಿಕೊಳ್ಳುವುದರಿಂದ ನಮ್ಮ ಬಲ ಹೆಚ್ಚಾಗುತ್ತದೆ. ಕೇಂದ್ರ ಸಶಸ್ತ್ರ ಪಡೆಗಳನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ಮನವಿ ಮಾಡಿದ್ದರು.