ಮುಂಬೈ : ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಭಾರತದ ಕೆಲವು ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಒದಗಿಸಿರುವ ಶಂಕೆ ಹಿನ್ನೆಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರನ್ನು (ಡಿಆರ್‌ಡಿಒ) ಗುರುವಾರ ಪುಣೆಯಲ್ಲಿ ಬಂಧಿಸಿದೆ. ಹನಿಟ್ರ್ಯಾಪ್‌ನಲ್ಲಿ ಸಿಲುಕಿದ ನಂತರ ಸಂಸ್ಥೆಯ ನಿರ್ದೇಶಕರಾದ ಪ್ರದೀಪ್ ಕುರುಲ್ಕರ್ ಅವರು ಪಾಕಿಸ್ತಾನಕ್ಕೆ ಮಾಹಿತಿ ನೀಡಿರುವ ಶಂಕೆ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಭಯೋತ್ಪಾದನಾ ನಿಗ್ರಹ ದಳ ಮುಂಬೈನಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದು, ಇದೀಗ ಪುಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರದೀಪ್ ಕುರುಲ್ಕರ್ ಅವರು ಡಿಆರ್ಡಿನನಲ್ಲಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿ ಹೊಂದಲು ಇನ್ನು ಕೇವಲ ಆರು ತಿಂಗಳು ಮಾತ್ರ ಬಾಕಿ ಇತ್ತು. ಕಳೆದ ಆರು ತಿಂಗಳ ಹಿಂದೆ ಅಧಿಕಾರಿಯು ಪಾಕಿಸ್ತಾನ ಹೆಣೆದಿದ್ದ ಹನಿಟ್ರ್ಯಾಪ್ಗೆ ಸಿಲುಕಿದ್ದರು. ಕಳೆದ ಆರು ತಿಂಗಳಿನಿಂದ ಈ ಮಹಿಳೆಯೊಂದಿಗೆ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಈ ಮಹಿಳೆಯು ಪಾಕಿಸ್ತಾನದ ಗುಪ್ತಚರ ಇಲಾಖೆಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿದ್ದಳು ಎಂದು ತಿಳಿದುಬಂದಿದೆ.