ದೆಹಲಿ ಭೇಟಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸಲು ಕೈ ಪಾಳಯದಲ್ಲಿ ಭಾರಿ ಬೆಳವಣಿಗೆ ನಡೆಯುತ್ತಿದೆ. ಸಿಎಂ ಹುದ್ದೆಗಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಏರ್ಪಟ್ಟಿದ್ದು, ಉನ್ನತ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕೆಂಬುದು ಕಾಂಗ್ರೆಸ್ಗೆ ಸವಾಲಾಗಿ ಪರಿಣಮಿಸಿದೆ.
ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು.
ಹೀಗಾಗಿ, ಇಂದು ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಪ್ರತ್ಯೇಕ ಸಭೆಯನ್ನೂ ನಡೆಸಲಿದ್ದಾರೆ ಎನ್ನಲಾಗಿದೆ.
ಸಿಎಂ ಆಕಾಂಕ್ಷಿ ಅಭ್ಯರ್ಥಿಗಳ ಭೇಟಿಗೂ ಮೊದಲು ರಾಹುಲ್ ಗಾಂಧಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಿಎಂ ಆಯ್ಕೆ ವಿಚಾರವಾಗಿ ಚರ್ಚಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಶಾಸಕರ ಅಭಿಪ್ರಾಯಗಳನ್ನು ಮಂಡಿಸುವ ನಿರೀಕ್ಷೆ ಇದೆ.
ಆದರೆ, ದೆಹಲಿ ಭೇಟಿ ಕುರಿತು ಬೆಂಗಳೂರಿನಲ್ಲಿಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, "ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ಗೆ ಬಿಟ್ಟಿದ್ದೇವೆ. ಪಕ್ಷದ ಸಂಪ್ರದಾಯದಂತೆ ಕೆಲವು ಶಾಸಕರನ್ನು ಕರೆದು ಅಭಿಪ್ರಾಯ ಕೇಳಿದ್ದಾರೆ. ನಾನು ದೆಹಲಿಗೆ ಹೋಗಬೇಕು ಅನ್ನುವುದು ಇದೆ. ಆದ್ರೆ, ನಾನು ಹೋಗುತ್ತೇನೋ ಇಲ್ವೋ ಎನ್ನುವುದನ್ನು ಇನ್ನೂ ತೀರ್ಮಾನ ಮಾಡಿಲ್ಲ. ಯಾಕಂದ್ರೆ, ಇಂದು ನನ್ನ ಹುಟ್ಟಿದ ದಿನ, ನಮ್ಮಲ್ಲಿ ಪೂಜೆ ಪುನಸ್ಕಾರಗಳಿವೆ" ಎಂದರು.
ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡುವ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಯಿತು. "ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ನೇಮಕ ಮಾಡಲು ಎಐಸಿಸಿ ಅಧ್ಯಕ್ಷರಿಗೆ ಅಧಿಕಾರವಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಣಯಿಸಿದೆ" ಎಂದು ತಿಳಿಸಲಾಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಮೂವರು ಕೇಂದ್ರ ವೀಕ್ಷಕರು ಭಾಗವಹಿಸಿದ್ದರು.
ಇದನ್ನೂ ಓದಿ :ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ
ತಡರಾತ್ರಿ ಆರಂಭವಾದ ಸಭೆ ಮಧ್ಯರಾತ್ರಿ 1.30ರ ವರೆಗೂ ನಡೆಯಿತು. ಹೊಸದಾಗಿ ಆಯ್ಕೆಯಾದ ಎಲ್ಲಾ 135 ಶಾಸಕರು ಭಾಗವಹಿಸಿದ್ದರು. ವೀಕ್ಷಕರಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಉಪಸ್ಥಿತರಿದ್ದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಸಿ.ವೇಣುಗೋಪಾಲ್ , ಜೈರಾಮ್ ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ:ಡಿ.ಕೆ.ಶಿವಕುಮಾರ್ 61ನೇ ಹುಟ್ಟುಹಬ್ಬ: ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಶುಭ ಹಾರೈಕೆ
ಕೈ ಶಾಸಕಾಂಗ ಪಕ್ಷದ ಸಭೆ ಬಳಿಕ ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲಾ, "ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷದ ನಾಯಕರು ಕೈಗೊಳ್ಳುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಪನ್ನು ನನ್ನ ತೀರ್ಪು ಆಗಿ ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂಬ ಭರವಸೆ ನನಗಿದೆ" ಎಂದು ಹೇಳಿದರು.
ಇದನ್ನೂ ಓದಿ :ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಶೀಘ್ರದಲ್ಲೇ ಹೊಸ ಸಿಎಂ ಘೋಷಣೆ: ಸುರ್ಜೇವಾಲಾ