ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ತನಿಖಾ ಸಂಸ್ಥೆ ಸಿಬಿಐ ತನ್ನ ಮೇಲೆ ಒತ್ತಡ ಹೇರಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಬುಧವಾರ 'ನ್ಯೂಸ್ 18 ರೈಸಿಂಗ್ ಇಂಡಿಯಾ' ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾ, ನರೇಂದ್ರ ಮೋದಿ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು. "ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿ (ಗುಜರಾತ್ ಸಿಎಂ ಆಗಿದ್ದಾಗ) ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಿತ್ತು. ಇಷ್ಟೆಲ್ಲಾ ಇದ್ದರೂ ಬಿಜೆಪಿ ಯಾವತ್ತೂ ಗದ್ದಲ ಎಬ್ಬಿಸಲಿಲ್ಲ" ಎಂದರು.
ಸೂರತ್‌ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, "ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಮತ್ತು ಶಾಸಕಾಂಗದ ಸದಸ್ಯತ್ವವನ್ನು ಕಳೆದುಕೊಂಡ ಏಕೈಕ ರಾಜಕಾರಣಿ ರಾಹುಲ್ ಗಾಂಧಿ. ಕೇಸ್ಗೆ ಸಂಬಂಧಿಸಿದಂತೆ ರಾಹುಲ್ ಉನ್ನತ ನ್ಯಾಯಾಲಯದ ಮೊರೆ ಹೋಗುವ ಬದಲು ಜನರ ಮುಂದೆ ತಮ್ಮ ಅಳಲು ತೋಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅನಾವಶ್ಯಕವಾಗಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಆರೋಪ ಹೊರಿಸಿ ದೂಷಿಸುತ್ತಿದ್ದಾರೆ" ಎಂದು ಹೇಳಿದರು.
"2013 ರ ಯುಪಿಎ ಸರ್ಕಾರದ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಲಾಲು ಪ್ರಸಾದ್, ಜೆ. ಜಯಲಲಿತಾ ಮತ್ತು ರಶೀದ್ ಅಲ್ವಿ ಸೇರಿದಂತೆ 17 ಪ್ರಮುಖ ನಾಯಕರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಚುನಾಯಿತ ಪ್ರತಿನಿಧಿಯು ಶಿಕ್ಷೆಯಾದ ತಕ್ಷಣ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾನೆ. ಏಕೆಂದರೆ, ಇದು ನಮ್ಮ ದೇಶದ ಕಾನೂನು. ಆದರೆ, ಅಂದು ಸ್ಥಾನ ಕಳೆದುಕೊಂಡ ಯಾರೂ ಕೂಡ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಿಲ್ಲ" ಎಂದರು.