ನವದೆಹಲಿ :ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳಿಗೆ ಮತ್ತು ಮತದಾರರಿಗೆ ಲಂಚ ನೀಡುವ ಅಥವಾ ಬೆದರಿಕೆ ಹಾಕುವ ಪ್ರಯತ್ನಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ಕಣ್ಗಾವಲು ಇರಿಸುವಂತೆ ಸೂಚಿಸಿದೆ.
ಚಾಮರಾಜನಗರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆಯಲು ಹಣ ಮತ್ತು ಸರ್ಕಾರಿ ವಾಹನ ನೀಡುವುದಾಗಿ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ ಚುನಾವಣಾ ಆಯೋಗ ಕ್ರಮಕೈಗೊಳ್ಳಲು ಸೂಚಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ 171ಇ, 171ಎಫ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಸ್ವಾಮಿ ಅಲಿಯಾಸ್ ಆಲೂರು ಮಲ್ಲು ಅವರಿಗೆ ಸಚಿವ ಸೋಮಣ್ಣ ಕರೆ ಮಾಡಿ, ನಾಮಪತ್ರ ವಾಪಸ್ ಪಡೆಯುವಂತೆ ಅಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು, ವೈರಲ್ ಆಗಿರುವ ಆಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಬಗ್ಗೆ ಅವರಿಗೆ ಯಾವುದೇ ವಿಚಾರವೂ ಸಿಗುತ್ತಿಲ್ಲ. ಅದಕ್ಕೆ ವಿರೋಧಿಗಳು ಈ ರೀತಿ ಮಾಡುತ್ತಿದ್ದಾರೆ. ನಾನು ಯಾವುದೋ ನಾಯಿ ನರಿಗಳ ಮಾತಿಗೆ ಪ್ರತಿಕ್ರಿಯಿಸುವ ಪರಿಸ್ಥಿತಿಯಲ್ಲಿ ಇಲ್ಲ. ನಾನು ದಡ್ಡ ಅಲ್ಲ, 45 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದೇನೆ. ಚುನಾವಣೆ ಮುಗಿದ ಮೇಲೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದರು.